Share this news

ಕಾರ್ಕಳ,ಜ. 10: ಬೈಲೂರು ಸಮೀಪದ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ಮೇಲ್ಛಾವಣಿಯ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ಇಬ್ಬರು ಆರೋಪಿಗಳಾದ ಕಳವಾರು ನಿವಾಸಿ ಆರೀಫ್ ಯಾನೆ ಮುನ್ನ (37) ಹಾಗೂ ಕಾವೂರು ನಿವಾಸಿ ಅಬ್ದುಲ್ ಹಮೀದ್ (32) ಎಂಬವರನ್ನು ಬಂಧಿಸಿದ್ದಾರೆ.ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಬಂಧಿತರಿಂದ 52 ಕೆಜಿ ತೂಕದ ತಾಮ್ರದ ತಗಡು, ಸೀಲಿಂಗ್ ಫ್ಯಾನ್, ಕೃತ್ಯಕ್ಕೆ ಬಳಸಿದ್ಧ ಗೂಡ್ಸ್ ವಾಹನ ಹಾಗೂ ಬೈಕ್ ಸೇರಿ ಸುಮಾರು ₹2.18 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಜ.03 ರಂದು ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ಬಾಗಿಲನ್ನು ಒಡೆದು ಒಳಪ್ರವೇಶಿಸಿದ ಕಳ್ಳರು ಕಟ್ಟಡದ ಮೇಲ್ಛಾವಣಿಗೆ ಅಳವಡಿಸಲಾಗಿದ್ದ ತಾಮ್ರದ ಹೊದಿಕೆಯನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ನಿರ್ಮಿತಿ ಕೇಂದ್ರದ ಅಧಿಕಾರಿಗಳು ನೀಡಿದ್ದ ದೂರಿನ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕಳವು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ ಅವರ ನಿರ್ದೇಶನದಂತೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ವ್ಯಾಪ್ತಿಯಲ್ಲಿ ತನಿಖೆ ನಡೆಸಿ ಖಚಿತ ಮಾಹಿತಿಯ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿವೆ.
ಬಂಧಿತ ಆರೀಫ್ ಯಾನೆ ಮುನ್ನ ವಿರುದ್ಧ ಪಡುಬಿದ್ರೆ, ಉಡುಪಿ ನಗರ, ಬ್ರಹ್ಮಾವರ, ಕಾರ್ಕಳ ಗ್ರಾಮಾಂತರ ಹಾಗೂ ಮೂಲ್ಕಿ–ಮೂಡಬಿದ್ರೆ ಪೊಲೀಸ್ ಠಾಣೆಗಳಲ್ಲಿ 9ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅಬ್ದುಲ್ ಹಮೀದ್ ವಿರುದ್ಧ ಬಂಟ್ವಾಳ ಹಾಗೂ ಮೂಡಬಿದ್ರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.
ಕಾರ್ಯಾಚರಣೆಯಲ್ಲಿ ಕಾರ್ಕಳ ಉಪವಿಭಾಗದ ಪ್ರಭಾರ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ಆರ್., ಪಿಎಸ್ಐಗಳಾದ ಮುರುಳೀಧರ ನಾಯ್ಕ, ಶಿವಕುಮಾರ್ ಎಸ್.ಆರ್., ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನಕುಮಾರ್ ಎಂ.ಎಸ್., ಪಿಎಸ್ಐ ಸುಂದರ ಹಾಗೂ ಸಿಬ್ಬಂದಿ ಮತ್ತು ಜಿಲ್ಲಾ ಆರ್ಡಿಸೆಲ್ ವಿಭಾಗದ ಅಧಿಕಾರಿಗಳು ಭಾಗವಹಿಸಿದ್ದರು.

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *