ಬೆಂಗಳೂರು: ರಾಜ್ಯಾದ್ಯಂತ ಬಗರ್‌ಹುಕುಂ ಅರ್ಜಿಗಳ ವಿಲೇವಾರಿಗೆ ಎರಡು ತಿಂಗಳ ಗಡುವು ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸದ ತಹಸೀಲ್ದಾರ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಿದ ಅವರು, “ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಈಗಲೂ ಮೀನಾಮೇಷ ಎಣಿಸುವುದು ಸರಿಯಲ್ಲ. ಹೀಗಾಗಿ ಎಲ್ಲಾ ತಹಶೀಲ್ದಾರರಿಗೆ ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ ಎರಡು ತಿಂಗಳ ಗಡುವು ನೀಡುತ್ತಿದ್ದು, ಈ ಅವಧಿಯಲ್ಲೂ ಬಗರ್ ಹುಕುಂ ಅರ್ಜಿಗಳ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟೀಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.
”ರಾಜ್ಯದಲ್ಲಿನ ಅರ್ಹ ಭೂಹೀನರಿಗೆ ಭೂಮಿ ಮಂಜೂರು ಮಾಡಬೇಕೆಂಬ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಇದು. ಆ ಕಾರಣಕ್ಕಾಗಿಯೇ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅಕ್ರಮ ಸಕ್ರಮ ಯೋಜನೆ ಅಡಿ ‘ಬಗರ್‌ಹುಕುಂ’ ಅರ್ಜಿ ಆಹ್ವಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಒಂದು ವರ್ಷದಿಂದ ನಾನು ಎಲ್ಲ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಬಗರ್‌ಹುಕುಂ ಸಂಬಂಧಿತ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇಷ್ಟಾದರೂ ಕೆಲ ಅಧಿಕಾರಿಗಳ ಕೆಲಸ ತೃಪ್ತಿಕರವಾಗಿಲ್ಲ. ಬಡವರ, ರೈತರ ಪರ ಕೆಲಸ ಮಾಡಲು ಅಸಡ್ಡೆ ತೋರುತ್ತಿದ್ದಾರೆ,” ಎಂದು ಕಿಡಿಕಾರಿದರು.
ಈಗಾಗಲೇ ಸಲ್ಲಿಕೆಯಾಗಿರುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ ಅರ್ಜಿಗಳು ಯಾವುವು? ಅನರ್ಹ ಅರ್ಜಿಗಳು ಯಾವುವು ಎಂದು ತಹಶೀಲ್ದಾರ್ ಗಳಿಗೆ ಪ್ರಾಥಮಿಕ ಪರಿಶೀಲನೆಯಲ್ಲೆ ತಿಳಿಯುತ್ತದೆ. ಹೀಗಾಗಿ ಈ ಕೆಲಸವನ್ನು ಅಧಿಕಾರಿಗಳು ಕಚೇರಿಯಲ್ಲೇ ಮುಗಿಸಿ. ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕೆಳಗೆ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಅವರಿಗೆ ಅನಗತ್ಯವಾಗಿ ಕೆಲಸ ನೀಡಬೇಡಿ. ಅನರ್ಹ ಅರ್ಜಿಗಳ ಪರಿಶೀಲನೆಗಾಗಿ ಅವರನ್ನು ಫೀಲ್ಡ್ ಗೆ ಕಳುಹಿಸಬೇಡಿ ಎಂದು ತಾಕೀತು ಮಾಡಿದರು.
ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಅವರು ಉಪಸ್ಥಿತರಿದ್ದರು.