ಉಡುಪಿ: ಉಡುಪಿ ನಗರದ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ಸ್ಥಳೀಯ ನಿವಾಸಿ ಸ್ಯಾಮುಯೆಲ್ ಸದಾನಂದ ಕರ್ಕಡ (59) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಅತಿ ವೇಗದಿಂದ ಚಲಿಸುತ್ತಿದ್ದ ಎರಡು ಬೈಕುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸದಾನಂದ ಕರ್ಕಡ ಅವರು ರಸ್ತೆಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡರು ಮತ್ತು ಸ್ಥಳದಲ್ಲೇ ಕೊನೆಯುಸಿರೆಳೆದರು.
ಅಪಘಾತದ ತೀವ್ರತೆಗೆ ಎರಡೂ ಬೈಕುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಈ ಘಟನೆಯ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.