Share this news

ಉಡುಪಿ: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಜಾರಿಗೊಳಿಸಲಾದ ಕಾಯಿದೆಗಳು, ಯೋಜನೆಗಳು ಹಾಗೂ ನಿಯಮಾವಳಿಗಳು ಕೇವಲ ಸುತ್ತೋಲೆಗಳಿಗಷ್ಟೇ ಸೀಮಿತವಾಗಿರದೇ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು.

ಅವರು ಶುಕ್ರವಾರ ನಗರದ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ತಾಲೂಕು ಮಟ್ಟದ ಸಹಭಾಗೀದಾರರಿಗೆ ನಡೆದ ಪೋಕ್ಸೋ, ಬಾಲ್ಯವಿವಾಹ, ಆರ್.ಟಿ.ಇ, ಭ್ರೂಣಹತ್ಯೆ, ವಲಸೆ ಕುಟುಂಬಗಳಲ್ಲಿ ಮಕ್ಕಳ ರಕ್ಷಣೆ, ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಭಾರತ ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕುಗಳೊಂದಿಗೆ ಕರ್ತವ್ಯಗಳನ್ನು ನೀಡಿದೆ. ಈ ದೇಶದ ಕಾನೂನುಗಳನ್ನು ಕಾಪಾಡಿಕೊಂಡು ಹೋಗುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಮಕ್ಕಳ ರಕ್ಷಣೆಗೆ ಇರುವ ಕಾಯಿದೆಗಳನ್ನು ಪತ್ರೀ ವರ್ಷ ತಿದ್ದುಪಡಿ ಮಾಡಲಾಗುತ್ತದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಹಭಾಗೀದಾರರು ಇದರ ಬಗ್ಗೆ ಅರಿವು ಹೊಂದಿರುವುದರೊಂದಿಗೆ, ಇಲಾಖೆಗಳ ಜೊತೆ ಸಮನ್ವಯತೆ ಹೊಂದಿ ತಮ್ಮ ವ್ಯಾಪ್ತಿಯಲ್ಲಿ ಮಕ್ಕಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಗಳನ್ನು ಸೂಕ್ಷ್ಮ ರೀತಿಯಲ್ಲಿ ನಿರ್ವಹಿಸಬೇಕು ಎಂದರು.

ಇಂದಿನ ಶಾಲೆಗಳು ಕೇವಲ ಶಿಕ್ಷಣ ಸಂಸ್ಥೆಗಳಲ್ಲದೇ ಅವು ಮಕ್ಕಳಿಗೆ ರಕ್ಷಣೆ ಕೊಡುವ ಸಂಸ್ಥೆಗಳಾಗಿ ರೂಪುಗೊಳ್ಳಬೇಕು. ಮಕ್ಕಳ ರಕ್ಷಣಾ ಅನುಷ್ಠಾನ ನೀತಿಯನ್ನು ಸಮರ್ಪಕವಾಗಿ ಜಾರಿ ಮಾಡಬೇಕು. ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ರಾಜ್ಯದ ಪ್ರತಿಯೊಂದು ಸರ್ಕಾರಿ ಕಟ್ಟಡಗಳಲ್ಲಿ ಪ್ರದರ್ಶಿಸಬೇಕು ಎಂದ ಅವರು ಏಕಪೋಷಕ, ಅನಾಥ ಮಕ್ಕಳು, ತಂದೆ-ತಾಯಿ ನಿರ್ಲಕ್ಷಿತ ಮಕ್ಕಳು, ವಿಕಲಚೇತನ ಮಕ್ಕಳು, ಆರ್ಥಿಕವಾಗಿ ಹಿಂದುಳಿದ ಮಕ್ಕಳೂ ಸೇರಿದಂತೆ ಮತ್ತಿತರ ಸಂಕಷ್ಟಕ್ಕೊಳಗಾದ ಮಕ್ಕಳನ್ನು ಗುರುತಿಸಿ, ಅವರುಗಳನ್ನು ಹುರಿದುಂಬಿಸಿ, ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಮಾತನಾಡಿ, ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಪ್ರಬುದ್ಧತೆ ಹೊಂದಿಲ್ಲದೇ ಇದ್ದಾಗ ತನಗೆ ಸಂಬಂಧಿಸಿದ ವಿಚಾರಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಮನೋಶಕ್ತಿ ಅವರುಗಳಲ್ಲಿ ಇರುವುದಿಲ್ಲ. ಅಂತಹ ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಅದನ್ನು ನೆರವೇರಿಸುವ ಉದ್ದೇಶದಿಂದ ಹಲವಾರು ಕಾಯಿದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿದ್ದು, ಅವುಗಳು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಯುನಿಸೆಫ್‌ನ ಸಿಸ್ಟರ್ ದುಲ್ಸಿನಾ ಕ್ರಾಸ್ತಾ ಮಕ್ಕಳ ರಕ್ಷಣೆಗೆ ಇರುವ ಕಾಯಿದೆಗಳ ಕುರಿತು, ಕಾಯಿದೆಯನ್ನು ಅನುಷ್ಠಾನ ಮಾಡುವಲ್ಲಿ ಇರುವ ಸೂಕ್ಷ್ಮತೆ ಗಳು, ಪರಸ್ಪರ ಸಹಕಾರ ಮತ್ತು ಸಮನ್ವಯದಿಂದ ಕೆಲಸ ನಿರ್ವಹಿಸುವಲ್ಲಿ ಇರುವ ತಂತ್ರಗಾರಿಕೆ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ, ಉಡುಪಿ ತಾಲೂಕು ಪಂಚಾಯತ್‌ನ ಮ್ಯಾನೇಜರ್ ಫರ್ಝಾನ್, ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು, ಜ್ಯೋತಿ ನಿರೂಪಿಸಿ, ವಂದಿಸಿದರು.

 

 

Leave a Reply

Your email address will not be published. Required fields are marked *