ಉಡುಪಿ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳಿಗೆ ಆದ್ಯತೆ ನೀಡಿ, ಮುಂಬರುವ ಮೂರು ವರ್ಷಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಉಡುಪಿಯಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ರಾಜ್ಯ ಬಜೆಟ್‌ನಲ್ಲಿ ಕರಾವಳಿ ಸಹಿತ 12 ಜಿಲ್ಲೆಗಳಿಗೆ 300 ಕಾಲುಸಂಕಗಳನ್ನು ಮಂಜೂರುಗೊಳಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸೋಮವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಉಡುಪಿ ಜಿಲ್ಲೆಯ ಐದು ಮಂದಿ ಶಾಸಕರು 500 ಕಾಲುಸಂಕಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ. ಈಗಾಗಲೇ 100 ಕಾಲು ಸಂಕಗಳು ಮಂಜೂರುಗೊಂಡಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ ಮೂರು ವರ್ಷಗಳಲ್ಲಿ ವಿದ್ಯಾರ್ಥಿಗಳು, ಕೃಷಿಕರಿಗೆ ಅನುಕೂಲವಾಗುವಂತೆ ಆದ್ಯತೆಯ ಮೇರೆಗೆ ಎಲ್ಲ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲಾಗುವುದು ಎಂದರು.
ಉಡುಪಿಗೆ ಹೆಚ್ಚುವರಿ ಐಬಿ ಉಡುಪಿಯಲ್ಲಿ ಈಗಿರುವ ಪ್ರವಾಸಿ ಮಂದಿರದಲ್ಲಿ ಸ್ಥಳಾವಕಾಶದ ಕೊರತೆ ಇರುವುದರಿಂದ ಜಿಲ್ಲಾ ಕೇಂದ್ರದಲ್ಲಿ 20 ಕೊಠಡಿಗಳ ಹೆಚ್ಚುವರಿ ಪ್ರವಾಸಿ ಮಂದಿರವನ್ನು ನಿರ್ಮಿಸಲಾಗುವುದು. ಹಳೇ ಪ್ರವಾಸಿ ಮಂದಿರದಲ್ಲಿ 4 ಕೊಠಡಿಗಳನ್ನು ದುರಸ್ತಿಗೊಳಿಸಲಾಗುವುದು ಎಂದರು.
ಮಲೆನಾಡು ಭಾಗಗಳಲ್ಲಿ ಹಳ್ಳ-ಕೊಳ್ಳಗಳನ್ನು ದಾಟಲು ಗ್ರಾಮೀಣ ಭಾಗದ ಜನರು ಕಾಲುಸಂಕಗಳನ್ನೇ ತಮ್ಮ ಸಂಚಾರಕ್ಕೆ ಬಳಸುತ್ತಾರೆ. ಈ ಹಿಂದೆ ಅವಘಡಗಳು ಕೂಡ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಡೆದಿವೆ. ಜನರ ಅನುಕೂಲಕ್ಕೆ ಜಿಲ್ಲೆಯಲ್ಲಿ 413 ಹೊಸಕಾಲು ಸಂಕಗಳ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು 51.77 ಕೋ.ರೂ. ವೆಚ್ಚದಲ್ಲಿ ಅಂದಾಜಿಸಲಾಗಿದೆ. ಈಗಾಗಲೇ ಈ ಹಿಂದೆ 30 ಕೋ.ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಬಾಕಿ ಉಳಿದ ಅನುದಾನವನ್ನು ಹಂತ ಹಂತವಾಗಿ ಬಿಡುಗಡೆಗೊಳಿಸಿ, ಮುಂಬರುವ ಮೂರು ವರ್ಷಗಳ ಒಳಗೆ ಕಾಲುಸಂಕಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.