ಬೆಳಗಾವಿ: ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮುಖಂಡರುಗಳನ್ನು ಮಾತುಕತೆಗೆ ಕರೆತರುವಂತೆ ನನಗೇ ಸೂಚಿಸಿದ್ದರು. ಸಿಸಿ ಪಾಟೀಲ್ ಸೇರಿದಂತೆ ಹಲವು ನಾಯಕರಿಗೆ ನಾನೇ ಖುದ್ದು ಕರೆ ಮಾಡಿದರೂ ಯಾರು ಸಭೆಗೆ ಬರಲಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಮಂಗಳವಾರದ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಕುರಿತು ಅಧಿವೇಶನದಲ್ಲಿ ಮತ್ತು ಮಾಧ್ಯಮಗಳೆದುರು ಪ್ರತಿಕ್ರಿಯಿಸಿದ ಸಚಿವರು, ಮೀಸಲಾತಿ ಹೋರಾಟ ರಾಜಕೀಯದತ್ತ ತಿರುಗುತ್ತಿದೆ. ಮೀಸಲಾತಿ ವಿಚಾರವಾಗಿ ಬಿಜೆಪಿಯವರಿಗೆ ಈಗಿನ ಪ್ರೀತಿ ಮೊದಲೇ ಯಾಕೆ ಇರಲಿಲ್ಲ ಎಂದು ಪ್ರಶ್ನಿಸಿರುವ ಅವರು , ಬಿಜೆಪಿ ಸರ್ಕಾರ ಇದ್ದಾಗ 2A ಮೀಸಲಾತಿಯನ್ನು ಯಾಕೆ ಕೊಡಲಿಲ್ಲ. ಆಗ ಮೀಸಲಾತಿ ಕೊಡದೇ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದರು ಎಂದು ಕಿಡಿಕಾರಿದರು.
ಪ್ರತಿಭಟನೆ ತೀವ್ರ ಸ್ವರೂಪ ಪಡೆಯಲು ಕೆಲವರ ಪ್ರಚೋದನೆಯೇ ಕಾರಣ. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ನ್ಯಾಯಾಲಯದ ಆದೇಶದಂತೆ ಕಾನೂನು ಉಲ್ಲಂಘಿಸಿ ಪ್ರತಿಭಟನೆ ಮಾಡುವುದಿಲ್ಲ ಎಂದು ಸ್ವತಃ ಪ್ರತಿಭಟನಾಕಾರರೇ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದರು. ಆದರೆ, ಪ್ರತಿಭಟನೆಯಲ್ಲಿ ಆಗಿದ್ದೇನು?
ಎಂದು ಪ್ರಶ್ನಿಸಿದರು. ಯಾರದೋ ಪ್ರಚೋದನೆಯಿಂದಾಗಿ ಅಮಾಯಕರು ಲಾಠಿ ಏಟು ತಿನ್ನುವಂತಾಯಿತು. ಇಂಥ ಘಟನೆಗಳು ಮುಂದೆ ಆಗಬಾರದು ಎಂದರು.