ಬೆಂಗಳೂರು(ಜು.10): . ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸಕ್ಕೆ ಬೆಳಗ್ಗೆ 7 ಗಂಟೆಗೆ ದಾಳಿ ನಡೆಸಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಸಂಬಂಧ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಮಂಗಳವಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಎದುರು ಹಾಜರಾಗಿ ವಿಚಾರಣೆ ಎದುರಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ಚುರುಕುಗೊಳಿಸಿದ್ದ ಎಸ್‌ಐಟಿ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ, ಬಸನಗೌಡ ದದ್ದಲ್ಗೆ ಮಂಗಳವಾರ ಪ್ರಶ್ನೆಗಳ ಸುರಿಮಳೆಗೈದಿದ್ದರು. ಸತತ 8 ಗಂಟೆ ವಿಚಾರಣೆ ನಡೆಸಿದ್ದರು. ವೈರಲ್ ಆಗಿರುವ ಆಡಿಯೋ ಆಧಾರದ ಮೇಲೆಯೂ ಬಿ.ನಾಗೇಂದ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು. ಚಂದ್ರಶೇಖರ್ ಡೆತ್ನೋಟ್ ಆಧರಿಸಿಯೂ ನಾಗೇಂದ್ರಗೆ ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.