ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್ ಅವರನ್ನು ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದರು. ಇದರ ಬೆನ್ನಲ್ಲೇ ನಾಗೇಂದ್ರ ಅವರ ಪಿಎ ಹರೀಶ್ ಅವರನ್ನು ಬಂಧಿಸಲಾಗಿದೆ.
ಬಂಧಿತ ಹರೀಶ್ ಅವ್ಯವಹಾರದ ವೇಳೆ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದು, ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೈದರಾಬಾದ್ನ ಆರೋಪಿ ಸತ್ಯನಾರಾಯಣ ವರ್ಮಾರಿಂದ ಬಂದಿದ್ದ ಹಣ ಹರೀಶ್ಗೆ ತಲುಪಿತ್ತು. ಪಿಎ ಹರೀಶ್ ಏಪ್ರಿಲ್ ತಿಂಗಳಿನ ಎರಡನೇ ವಾರ ಬಿಬಿಎಂಪಿ ಕಚೇರಿಯ ಶ್ರೀನಿಧಿ ಸಾಗರ್ ಹೋಟೆಲ್ ಬಳಿ ಪದ್ಮನಾಭರಿಂದ 25 ಲಕ್ಷ ಹಣ ಪಡೆದ ಆರೋಪ ಎದುರಿಸುತ್ತಿದ್ದಾರೆ. ಮಾಜಿ ಸಚಿವ್ ನಾಗೇಂದ್ರ ಅವರ ಪರವಾಗಿ ಹರೀಶ್ ಹವಾಲಾ ಹಣ ಮತ್ತು ಚಿನ್ನದ ಬಿಸ್ಕೆಟ್ ಪಡೆದುಕೊಂಡಿದ್ದಾರೆ. ಅಲ್ಲದೆ, 50ರಿಂದ 60 ಕೋಟಿ ವ್ಯವಹಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಹರೀಶ್ನನ್ನು ಬಂಧಿಸಿದ್ದಾರೆ.
ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದಿಂದ ಬೇಸತ್ತು ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಕರಣದ ತನಿಖಾಗಿ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಎಸ್ಐಟಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ಅತ್ತ ಸಿಬಿಐ ಕೂಡ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಇದೀಗ ಜಾರಿ ನಿರ್ದೇಶನಾಲಯ ಏಕಾಏಕಿ ಮಾಜಿ ಸಚಿವ ಬಿ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದು, ಅವರನ್ನು ಬಂಧಿಸುವ ಸಾಧ್ಯತೆ ಇದೆ.
