ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಲೇಖಕಿ ಡಾ ಕಮಲಾ ಹಂಪನಾ(88ವ) ಅವರು ಹೃದಯಾಘಾತದಿಂದ ಶನಿವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ.
ಅವರು ಪತಿ ಹಿರಿಯ ಸಾಹಿತಿ ಡಾ ಹಂ.ಪ.ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರು, ಹಿತೈಷಿಗಳನ್ನು ಅಗಲಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಪುತ್ರಿ ಡಾ. ಆರತಿ ಮನೆಯಲ್ಲಿ ವಾಸವಿದ್ದರು. ನಿನ್ನೆ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಅಸುನೀಗಿದ್ದಾರೆ.
ಕಮಲಾ ಹಂಪನಾ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿAದ 60 ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸಿದ್ದರು. ಕಮಲಾ ಹಂಪನಾ ಅವರು, ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ಸಿ. ರಂಗಧಾಮನಾಯಕ್-ಲಕ್ಷಮ್ಮ ದಂಪತಿಗಳ ಪುತ್ರಿಯಾಗಿ 28-10-1935ರಲ್ಲಿ ಜನಿಸಿದರು. ತುಮಕೂರಿನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸವಾಗಿ, 1953ರಲ್ಲಿ ಎಸ್.ಎಸ್.ಎಲ್.ಸಿ ಮುಗಿಸಿದರು. ಕಾಲೇಜು ವಿದ್ಯಾಭ್ಯಾಸ ಮೈಸೂರಿನಲ್ಲಿ ಮುಂದುವರೆದು 1955-58ರಲ್ಲಿ ಬಿ.ಎ. ಆನರ್ಸ್ ಮಾಡಿದರು. 1959 ರಲ್ಲಿ ಕನ್ನಡ ಅಧ್ಯಾಪಕಿಯಾಗಿ ಶಿಕ್ಷಣ ವೃತ್ತಿಗೆ ಪ್ರವೇಶಿಸಿ, ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಬೆಂಗಳೂರಿನ ವಿಜಯನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲೆ ಆಗಿ ಕಾರ್ಯ ನಿರ್ವಹಿಸಿದರು. ಸರ್ಕಾರಿ ಸೇವೆಯಿಂದ ನಿವೃತ್ತರಾದ ಮೇಲೆ ಮೈಸೂರು ವಿಶ್ವವಿದ್ಯಾಲಯದ ಜೈನಶಾಸ್ತ್ರ, ಪ್ರಾಕೃತ ಅಧ್ಯಯನದ ಪ್ರಾಧ್ಯಾಪಕರೂ, ಅಧ್ಯಕ್ಷರೂ, ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕರೂ ಆಗಿದ್ದರು.
ಸಾಹಿತ್ಯ ಕೃತಿಗಳು ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನಾ, ಬಣವೆ ಸೇರಿದಂತೆ ಹಲವು ಸಾಹಿತ್ಯಗಳನ್ನು ರಚಿಸಿದ್ದಾರೆ. 2003 ಡಿಸೆಂಬರ್ ತಿಂಗಳಲ್ಲಿ ಮೂಡುಬಿದಿರೆಯಲ್ಲಿ ಜರುಗಿದ 71 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಮಲಾ ಹಂಪನಾ ಅಧ್ಯಕ್ಷರಾಗಿದ್ದರು.