ಬೆಂಗಳೂರು:ವಕ್ಫ್ ವಿವಾದ ತೀವ್ರಗೊಂಡಿದ್ದು ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸುತ್ತಿದೆ. ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.ಬಳ್ಳಾರಿಯಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ವಕ್ಫ್ ಬೋರ್ಡ್ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಿದ್ದಾರೆ.
ವಕ್ಫ್ ಬೋರ್ಡ್ ಜಮೀನು ವಿವಾದವನ್ನು ಖಂಡಿಸಿ ಬಿಜೆಪಿ ನಾಯಕರು ಧರಣಿ ನಡೆಸಲು ಸಜ್ಜಾಗಿದ್ದರೆ, ಬಿಜೆಪಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಗ್ಯಾರಂಟಿಗಳನ್ನು ನಿಲ್ಲಿಸುವಂತೆ ಮಾಡ್ಬೇಕು ಎಂಬುದು ಬಿಜೆಪಿ ಹುನ್ನಾರ. ನೋಟಿಸ್ ಹಿಂಪಡೆಯುವಂತೆ ಸೂಚಿಸಿದ ಮೇಲೂ, ಬಿಜೆಪಿ ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದೆ? ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಹುಟ್ಟು ಗುಣವಾಗಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ವಿರುದ್ಧ ವಕ್ಫ್ ವಿವಾದ ಧಗ ಧಗಿಸುತ್ತಿರುವಾಗಲೇ ಬಿಜೆಪಿಯತ್ತ ಹೊಸಬಾಂಬ್ ಸ್ಫೋಟ ಆಗಿದೆ. ವಕ್ಫ್ ಬೆಂಬಲವಾಗಿ ಬಸವರಾಜ ಬೊಮ್ಮಾಯಿ ಮಾತನಾಡಿರುವ ವಿಡಿಯೋವೊಂದನ್ನ ಸಚಿವ ಪ್ರಿಯಾಂಕ್ ಖರ್ಗೆ ಪೋಸ್ಟ್ ಮಾಡಿ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಸಿಡಿಸಿರೋ ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಿದ ಸಂಸದ ಬೊಮ್ಮಾಯಿ, ನಾನು ವಕ್ಫ್ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ್ದೆ. ಆದರೆ ವಕ್ಫ್ ಮೀಟಿಂಗ್ ಮಾಡಿಲ್ಲ, ರೈತರಿಗೂ ನಾನು ನೋಟಿಸ್ ಕೊಟ್ಟಿಲ್ಲ ಎಂದಿದ್ದಾರೆ.