ಕಾರ್ಕಳ: ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ ಮತ್ತು ವಕೀಲರ ಸಂಘ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಮಾ 19ರಂದು ಮಂಗಳವಾರ ಕಾರ್ಕಳ ನ್ಯಾಯಾಲಯದಲ್ಲಿ ನಡೆಯಿತು.
ಉಡುಪಿ ಜಿಲ್ಲಾ ನ್ಯಾಯಾಲಯದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ದಿನೇಶ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರಿಗೆ ಶೇ 33ರ ಮೀಸಲಾತಿ ಕೊಟ್ಟಿದ್ದು ಸಾಲದು ಮಹಿಳೆಯರು ಸಹ ಪುರುಷರಷ್ಟೇ ಎಲ್ಲಾ ವಿಚಾರಗಳಲ್ಲಿಯೂ ಸಮಾನರು ಹಾಗಾಗಿ ಮಹಿಳೆಯರಿಗೆ ಶೇಕಡಾ 50 ಮೀಸಲಾತಿ ನೀಡಬೇಕೆಂದು ಆಗ್ರಹಿಸಿದರು.
ವಕೀಲರ ಸಂಘದ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿಯವರು ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಕಳದ ನ್ಯಾಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇದೇ ಪ್ರಥಮ ಬಾರಿಗೆ ಇಷ್ಟು ವಿಜೃಂಭಣೆಯಿಂದ ಆಚರಿಸಲಾಯಿತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಕಳದ ಹಿರಿಯ ನ್ಯಾಯವಾದಿ ಎಂ. ಕೆ. ವಿಜಯಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷೆ ಶರ್ಮಿಳಾ ಸಿ.ಎಸ್. ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶೆ ಕೋಮಲಾ ಹಾಜರಿದ್ದರು.
ಸಮಾರಂಭದಲ್ಲಿ ಹಿರಿಯ ಮಹಿಳಾ ನ್ಯಾಯವಾದಿ ರೇಖಾ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.ಸಾಂಸ್ಕೃತಿಕ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನ್ಯಾಯವಾದಿ ಪರಿತೋಷ್ ಡಿ. ಜೈನ್ ವಂದಿಸಿದರು.