

ನವದೆಹಲಿ, 25: ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಶಿಕ್ಷೆಯ ಅಮಾನತು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಎರಡು ವಾರಗಳಲ್ಲಿ ಶರಣಾಗುವಂತೆ ಸೂಚಿಸಿದೆ.ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಚಂದ್ರಶೇಖರ್ ಅವರ ಪೀಠವು ರಾಜ್ಯ ಸರ್ಕಾರ ಮತ್ತು ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿರುವ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸಿಬಿಐ ಮತ್ತು ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೇ ಪ್ರಕರಣದಲ್ಲೀಗ ವಿನಯ್ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಾಸಕ ಸ್ಥಾನದಿಂದಲೂ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ದೋಷ ಸಾಬೀತಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್ನಲ್ಲಿ ವಿನಯ್ ಕುಲಕರ್ಣಿ ಅವರನ್ನು ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ತೀರ್ಪಿನ ಬೆನ್ನಲ್ಲೇ ಅವರು ಜೈಲು ಪಾಲಾಗಿದ್ದರು. ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಕಳೆದ ಜೂನ್ ತಿಂಗಳಿನಲ್ಲಿ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿತ್ತು. ಇದರಿಂದಾಗಿ ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರಿಂದ ಈಗ ಅವರಿಗೆ ಮತ್ತೆ ಜೈಲು ಶಿಕ್ಷೆ ಎದುರಾಗಿದೆ.






.
.
.
.
.
.
.
.
.
.
.
.
.
.
.
.
.
.
.
.
